ಭಟ್ಕಳ: ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಬುಧವಾರ ರಾತ್ರಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಮಸೀದಿ ಹಾಗೂ ಮದರಸಾದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.
ತಲಾಂದದಿಂದ ಹೊರಟ ಮೆರವಣಿಗೆ ಗುಳ್ಳೆ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದಾಗ ಮಾರ್ಗಮಧ್ಯದಲ್ಲಿದ್ದ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ತಾಜುಸುನ್ನಾ ಅರೇಬಿಕ್ ಮದರಸಾದ ಮೇಲೆ ಅಪರಿಚಿತರು ಕಲ್ಲುಗಳನ್ನು ತೂರಿದ್ದಾರೆ. ಪಟ್ಟಣದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.
ಕಲ್ಲು ತೂರಾಟದಿಂದ ಮಸೀದಿ ಹಾಗೂ ಮದರಸಾದ ಕಿಟಕಿ ಗಾಜುಗಳು ಪುಡಿಯಾಗಿ ಹಾನಿ ಸಂಭವಿಸಿದೆ. ಈ ಸಂಬಂಧ ಸ್ಥಳೀಯ ಅಬ್ದುಲ್ ಅಲಿಂ ಎಂಬವರು ಭಟ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಲ್ಲು ತೂರಾಟದಿಂದ ಕಟ್ಟಡದ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯ ಮುಸ್ಲಿಮರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು.
ವಿಷಯ ತಿಳಿದು ಸ್ಥಳಕ್ಕೆ ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃತ್ಯ ಎಸಗಿದವರನ್ನು ಬಂಧಿಸುವುದಾಗಿ ಎಸ್ಪಿ ಭರವಸೆ ನೀಡಿದ ಬಳಿಕ ಸ್ಥಳೀಯರು ಪೊಲೀಸ್ ಠಾಣೆಯಿಂದ ತೆರಳಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಕಲ್ಲು ತೂರಾಟದ ಆರೋಪದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.













