ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ದೇಶವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಗುರುವಾರ ಎಚ್ಚರಿಕೆ ನೀಡಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಜೆಪಿ ಸಂಚಾಲಕ ಅಭಿಜಿತ್ ದೀಪ್ಕೆ, ‘ಜ್ಞಾನೇಶ್ ಕುಮಾರ್ ಅತಿ ದೊಡ್ಡ ದೇಶದ್ರೋಹಿ. ಬಿಜೆಪಿ ನಿರ್ದೇಶನದಂತೆ ಅವರು ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದಾರೆ. ವಿವಿಧ ರಾಜ್ಯಗಳಲ್ಲಿ ವಿರೋಧಪಕ್ಷಗಳನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಆರೋಪಿಸಿದರು.
‘ಬಿಜೆಪಿಯ ಚುನಾವಣಾ ಗೆಲುವುಗಳ ಹಿಂದಿರುವ ಪ್ರಮುಖ ವ್ಯಕ್ತಿ ಜ್ಞಾನೇಶ್ ಕುಮಾರ್. ಅವರು ಬಿಜೆಪಿಯ ನಿಜವಾದ ಹೀರೊ. ಅವರ ನೇಮಕಾತಿಯ ನಂತರ ಮಹಾರಾಷ್ಟ್ರ , ಪಶ್ಚಿಮ ಬಂಗಾಳ, ಹರಿಯಾಣ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಜೆಪಿಯ ಮತಗಳ ಪ್ರಮಾಣ ಹೆಚ್ಚಾಗಿದೆ’ ಎಂದು ಹೇಳಿದರು.
ಸಿಜೆಪಿ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳು :
- ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ ಅವರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸಬೇಕು.
- ಎಸ್ಐಆರ್‌ಗೆ ಮುನ್ನ ಜಾರಿಯಲ್ಲಿದ್ದ ಮತದಾರರ ಪಟ್ಟಿಯನ್ನು ಮರುಸ್ಥಾಪಿಸಬೇಕು.
- ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದ 2023ರ ಕಾಯ್ದೆಯನ್ನು ರದ್ದುಗೊಳಿಸಬೇಕು.













