ಬಾಲಿವುಡ್ ನಟ ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ಮತ್ತು ಯಶ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಸೆಟ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಚಿತ್ರೀಕರಣದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು.
ಮುಂಬೈನಲ್ಲಿ ನಡೆದ ಈ ಘಟನೆ ಬಗ್ಗೆ ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE) ಅಧ್ಯಕ್ಷ ಬಿ.ಎನ್. ತಿವಾರಿ ಖಚಿತಪಡಿಸಿದ್ದು, ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದಿದ್ದಾರೆ.
ಮುಂಬೈನ ‘ಪ್ರೈಮ್ ಫೋಕಸ್ ಸ್ಟುಡಿಯೋಸ್’ನಲ್ಲಿ ರಾಮಾಯಣ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಸ್ಟುಡಿಯೊ ಹೊರಗಿನ ಟೆಂಟ್ವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಆ ಕೂಡಲೇ ಎಚ್ಚೆತ್ತುಕೊಂಡ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಇದೇ ವೇಳೆ ಪ್ರೈಮ್ ಫೋಕಸ್ ಸ್ಟುಡಿಯೊ ಆವರಣದಲ್ಲಿ ಮತ್ತೆರಡು ಟಿವಿ ಶೋಗಳ ಚಿತ್ರೀಕರಣವೂ ನಡೆಯುತ್ತಿತ್ತು ಎಂದು ವರದಿಯಾಗಿದೆ.














