ಬೆಂಗಳೂರು: ರಾಜ್ಯದಲ್ಲಿ ಬರದಿಂದ ಉಂಟಾಗಿರುವ ನಷ್ಟದ ಕುರಿತು ಅಂತಿಮ ಮೆಮೊರಾಂಡಮ್ ಸಿದ್ಧಪಡಿಸಲಾಗುತ್ತಿದ್ದು, ಬಹುಶಃ ಇನ್ನೊಂದು ವಾರದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಸಂಕಷ್ಟದಲ್ಲಿರುವ ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗಾಗಲೇ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೆವು. ಇದೀಗ ವೈಜ್ಞಾನಿಕ ಮೌಲ್ಯಮಾಪನ ಹಾಗೂ ಸ್ಥಳ ಪರಿಶೀಲನೆಯ ಆಧಾರದಲ್ಲಿ ಹೊಸದಾಗಿ 9 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 226ಕ್ಕೆ ಏರಿಕೆಯಾಗಿದೆ. ಹೊಸದಾಗಿ ಘೋಷಿಸಲಾದ ತಾಲ್ಲೂಕುಗಳಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತೀವ್ರ ಬರಪೀಡಿತವಾಗಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ, ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡುಬಿದಿರೆ ಮತ್ತು ಮೂಲ್ಕಿ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಮತ್ತು ದಾಂಡೇಲಿ ಸೇರಿದಂತೆ 8 ತಾಲ್ಲೂಕುಗಳು ಮಧ್ಯಮ ಬರಪೀಡಿತವಾಗಿವೆ.
ಇನ್ನುಳಿದ ತಾಲೂಕುಗಳಲ್ಲೂ ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿಯಲಿದ್ದು, ಮಾನದಂಡಗಳಿಗೆ ಒಳಪಟ್ಟಲ್ಲಿ ಮುಂದಿನ ಹಂತದಲ್ಲಿ ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುವುದು. ಬರದಿಂದ ರೈತರ ಜೀವನೋಪಾಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು, ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸುವುದು ಹಾಗೂ ಗ್ರಾಮೀಣ ಜನರ ಹಿತ ಕಾಯುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆಈ ತಾಲೂಕುಗಳಲ್ಲಿ ಗೌಂಡ್ ಟೂಥಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ. ಇನ್ನುಳಿದ ಕೆಲವು ತಾಲೂಕುಗಳಲ್ಲಿ ಟ್ರಿಗರ್-1 ಮಾನದಂಡಗಳ ಪರಿಶೀಲನೆ ನಡೆಯುತ್ತಿದೆ. ಅವುಗಳು ಅರ್ಹತೆ ಪಡೆದರೆ ಗೌಂಡ್ ಟೂಥಿಂಗ್ಗೆ ಕಳುಹಿಸಲಾಗುವುದು ಎಂದು ಈ ಸಂದರ್ಭದಲ್ಲಿ ಮಾಧ್ಯಗಳಿಗೆ ತಿಳಿಸಿದ್ದಾರೆ.









