ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರೈತ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಹೋಬಳಿಯ ಬೆಳ್ಳೂರು ಗ್ರಾಮದ ನಿವಾಸಿ ಇಟ್ಟೀರ ಪೊನ್ನಣ್ಣ ಎಂಬವರಿಗೆ ಸೇರಿದ ಹಸುವನ್ನು ಹುಲಿ ಬಲಿ ಪಡೆದಿದೆ. ಇದರೊಂದಿಗೆ ಕಳೆದ ಒಂದು ವರ್ಷದಲ್ಲಿ ಗ್ರಾಮದಲ್ಲಿ 13 ಹಸುಗಳು ಬಲಿಯಾದಂತಾಗಿದ್ದು, ಇದು ರೈತರು ಹಾಗೂ ಗ್ರಾಮಸ್ಥರನ್ನು ಸಹಜವಾಗಿಯೇ ಆಕ್ರೋಶಗೊಳಿಸಿದೆ ಎಂದು ತಿಳಿದು ಬಂದಿದೆ.
ಪರಿಣಾಮವಾಗಿ ರೈತಸಂಘದ ಸಹಯೋಗದಲ್ಲಿ ಗ್ರಾಮಸ್ಥರು ಬೀದಿಗಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಅದರನ್ವಯ ಹುದಿಕೇರಿ-ಕುಟ್ಟ ನಡುವಿನ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದಲ್ಲಿ ಒಂದು ವರ್ಷದಲ್ಲಿ 13 ಜಾನುವಾರುಗಳು ವ್ಯಾಘ್ರನ ಅಟ್ಟಹಾಸಕ್ಕೆ ಬಲಿಯಾಗಿವೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ಕೂಡಲೇ ಹುಲಿಯನ್ನು ಸೆರೆ ಹಿಡಿಯುವಂತೆ ಹಾಗೂ ಹಸುವಿನ ಮಾಲಕರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಇನ್ನು ಪ್ರತಿಭಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಿದ್ದು, ಪ್ರತಿಭಟನಾಕಾರರ ಮನ ಒಲಿಸುವ ಪ್ರಯತ್ನದಲ್ಲಿದ್ದಾರೆ ಎಂದು ಜಾಲತಾಣ ಮೂಲಗಳು ತಿಳಿಸಿವೆ.













