ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಸ್ಥಳೀಯಾಡಳಿತ ಸಂಸ್ಥೆಗಳ ನಿರ್ಲಕ್ಷ್ಯ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಹಾಗೂ ‘ನಮ್ಮ ಹಕ್ಕು ನಮಗೆ ನೀಡಿ’ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿದೆ. ನವೆಂಬರ್ 2ರಂದು ಪುತ್ತೂರಿನ ಬೊಳುವಾರಿನಿಂದ ಪಾದಯಾತ್ರೆಗೆ ಚಾಲನೆ ದೊರೆಯಲಿದ್ದು, ಗ್ರಾಮಗಳಲ್ಲಿ ಪ್ರತಿಭಟನೆ ಬಳಿಕ ನವೆಂಬರ್ 19ರಂದು ವಿಟ್ಲದಲ್ಲಿ ಸಮಾರೋಪಗೊಳ್ಳಲಿದೆ.
ಪುತ್ತೂರು ವಿಧಾನಸಭಾ ಕ್ಷೇತ್ರದ 31 ಗ್ರಾಮ ಪಂಚಾಯತ್‌ಗಳು, 1 ನಗರಸಭೆ, ಹಾಗೂ ಒಂದು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸೇರಿದಂತೆ ಒಟ್ಟು 33 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೋರಾಟವನ್ನು ‘ಹೈಬ್ರಿಡ್ ಪಾದಯಾತ್ರೆ’ ಎಂದು ಬಣ್ಣಿಸಿ, ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ನಡೆಸುವಂತೆ ಸರಕಾರವನ್ನು ಒತ್ತಾಯಿಸುವುದೇ ಇದರ ಪ್ರಮುಖ ಉದ್ದೇಶ ಎಂದರು. ಕಾಂಗ್ರೆಸ್ ಸರಕಾರವು ‘ವೋಟ್ ಚೋರಿ’ ಆರೋಪದ ಮೂಲಕ ಅಧಿಕಾರಕ್ಕೆ ಬಂದಿದೆ. ಆದರೆ ಇತ್ತೀಚೆಗೆ ಮತಪತ್ರದ ಮೂಲಕ ನಡೆದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವು ಈ ಆರೋಪಗಳಿಗೆ ಉತ್ತರ ನೀಡಿದೆ ಎಂದು ಸಂಜೀವ ಮಠಂದೂರು ಹೇಳಿದರು. ಪ್ರಜಾಪ್ರಭುತ್ವದ ರಕ್ಷಕರು ಹಾಗೂ ಸಂವಿಧಾನದ ಪ್ರತಿಪಾದಕರು ಎಂದು ಹೇಳಿಕೊಳ್ಳುವ ಕಾಂಗ್ರೆಸ್‌ಗೆ ಪ್ರಜಾಪ್ರಭುತ್ವದ ಮೇಲೆ ನಿಜವಾದ ವಿಶ್ವಾಸವಿದ್ದರೆ ತಕ್ಷಣ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ನಡೆಸಬೇಕು ಎಂದು ಅವರು ಆಗ್ರಹಿಸಿದರು. ಗ್ರಾಮ ಪಂಚಾಯತ್‌ಗಳ ಅವಧಿ ಮುಗಿದು ಒಂದು ವರ್ಷ ಕಳೆದಿದೆ. ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್‌ಗಳ ಅವಧಿ ಮುಗಿದು ಆರು ವರ್ಷಗಳಾಗಿವೆ. ಪುತ್ತೂರು ನಗರಸಭೆಯ ಅವಧಿಯೂ ಮುಗಿದು ಒಂದು ವರ್ಷ ಕಳೆದಿದ್ದು, ಎಪಿಎಂಸಿಗಳಿಗೆ ಚುನಾವಣೆ ನಡೆಸದೆ ನಾಲ್ಕು ವರ್ಷಗಳಾಗಿವೆ ಎಂದು ಅವರು ಆರೋಪಿಸಿದರು. ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶಗಳಿಗೂ ಮನ್ನಣೆ ನೀಡದೆ, ಅವುಗಳಿಗೆ ವಿರುದ್ಧವಾಗಿ ಸರಕಾರ ನಡೆದುಕೊಳ್ಳುತ್ತಿದೆ ಎಂದು ಟೀಕಿಸಿದ ಅವರು, ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ನಗರಸಭೆ ಚುನಾವಣೆಗಳನ್ನು ನಡೆಸುವ ಮೂಲಕ ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಪುತ್ತೂರು ನಗರಸಭೆಯ ಆಡಳಿತದ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ ಸಂಜೀವ ಮಠಂದೂರು, ಕಳೆದ ಒಂದು ವರ್ಷದಲ್ಲಿ ಜಿಲ್ಲಾಧಿಕಾರಿಗಳು ನಗರಸಭೆಯಲ್ಲಿ ಒಂದೇ ಒಂದು ಪರಿಶೀಲನಾ ಸಭೆ ನಡೆಸಿಲ್ಲ ಎಂದು ಆರೋಪಿಸಿದರು. ನಗರಸಭೆಯಲ್ಲಿ ಆಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಟೀಕಿಸಿದ ಅವರು, ರಾಜ್ಯ ಸರಕಾರದಿಂದ ನಿರೀಕ್ಷಿತ ಅನುದಾನಗಳು ಬರುತ್ತಿಲ್ಲ ಎಂದರು. ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಇಲ್ಲದಿರುವುದರಿಂದ ಕೇಂದ್ರದ 16ನೇ ಹಣಕಾಸು ಆಯೋಗದ ಅನುದಾನ ಪಡೆಯುವ ಪ್ರಕ್ರಿಯೆಯ ಮೇಲೂ ಪರಿಣಾಮ ಉಂಟಾಗುತ್ತಿದೆ. ಇದರ ಹೊರೆ ಅಂತಿಮವಾಗಿ ಜನಸಾಮಾನ್ಯರ ಮೇಲೆ ಬೀಳುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು. ಸರಕಾರ ಆರ್ಥಿಕ ಸಂಕಷ್ಟದಲ್ಲಿದ್ದರೂ ಸಂವಿಧಾನವನ್ನು ರಕ್ಷಿಸಿ, ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಗೌರವ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯಬಾರದು ಎಂದು ಹೇಳಿದರು.
ನ.2ರಂದು ಪುತ್ತೂರಿನ ಬೊಳುವಾರಿನ ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಿಂದ ಪಾದಯಾತ್ರೆ ಆರಂಭವಾಗಲಿದೆ. ಅಲ್ಲಿಂದ ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದವರೆಗೆ ತೆರಳಿ ಪ್ರತಿಭಟನೆ ನಡೆಸಲಾಗುವುದು. ಬಳಿಕ ಪುತ್ತೂರು ನಗರಸಭೆ ಕಚೇರಿಯ ಮುಂದೆ ಮನವಿ ಸಲ್ಲಿಸಲಾಗುವುದು ಎಂದು ಸಂಜೀವ ಮಠಂದೂರು ವಿವರಿಸಿದರು. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹಾಗೂ ಪುತ್ತೂರು ಜಿಲ್ಲಾ ಸಂಯೋಜಕ ವಿಕಾಸ್ ಪುತ್ತೂರು ಭಾಗವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತ್‌ಗಳು ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹಂತ ಹಂತವಾಗಿ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆಗಳು ನಡೆಯಲಿವೆ. ಸ್ಥಳೀಯಾಡಳಿತ ಸಂಸ್ಥೆಗಳ ಕಚೇರಿಗಳ ಎದುರು ‘ನಮ್ಮ ಹಕ್ಕು ನಮಗೆ ನೀಡಿ’ ಎಂಬ ಘೋಷಣೆಯೊಂದಿಗೆ ಚುನಾವಣೆ ನಡೆಸುವಂತೆ ಆಗ್ರಹಿಸಲಾಗುವುದು. ನವೆಂಬರ್ 19ರಂದು ವಿಟ್ಲದಲ್ಲಿ ಪಾದಯಾತ್ರೆಯ ಸಮಾರೋಪ ನಡೆಯಲಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಶಶಿಧರ್ ನಾಯಕ್, ಮಾಧ್ಯಮ ಪ್ರಮುಖ್ ಮಹೇಶ್ ಕೇರಿ ಹಾಗೂ ಮಾಧ್ಯಮ ವಕ್ತಾರ ರಾಜೇಶ್ ಬನ್ನೂರು ಉಪಸ್ಥಿತರಿದ್ದರು.















