ನವದೆಹಲಿ : ತಮ್ಮ ಬಳಿ ಇರುವ 1,400 ಕೋಟಿ ರೂ. ಮೌಲ್ಯದ ಆಸ್ತಿ ಕಾನೂನುಬದ್ಧವಾಗಿ ಸಂಪಾದಿಸಿದ್ದೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಕುಮಾರಸ್ವಾಮಿ ಅವರ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ. ನೈಸ್ ರಸ್ತೆ ಯೋಜನೆ ಮತ್ತು ಬಿಡದಿ ಟೌನ್‌ಶಿಪ್‌ನಲ್ಲಿ ಬಗ್ಗೆ ಧೈರ್ಯವಿದ್ದರೆ ವಿಧಾನಸಭೆಯೊಳಗೆ ಚರ್ಚೆಗೆ ಬರಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ.
ಇಂದಿನ ಮೌಲ್ಯದಲ್ಲಿ ನನ್ನ ಬಳಿ ₹1,400 ಕೋಟಿ ಮೌಲ್ಯದ ಆಸ್ತಿ ಇದೆ. ನಾನು ಕಾನೂನು ಚೌಕಟ್ಟಿನಲ್ಲಿ ಆಸ್ತಿ ಸಂಪಾದಿಸಿದ್ದೇನೆ. ಕುಮಾರಸ್ವಾಮಿ ಅವರು ಹತಾಶಾರಾಗಿ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿ ಅವರ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ‘ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಬಿರುಕು, ತಾ ಮುಂದು ನಾ ಮುಂದು ಎಂಬ ಪೈಪೋಟಿಯಲ್ಲಿ ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೆ. ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಅವರು ಇಷ್ಟು ದಿನ ಏಕೆ ಸುಮ್ಮನಿದ್ದರು. ಅವರ ತಂದೆ ದೇವೇಗೌಡರೇ ಆ ಯೋಜನೆಗೆ ಸಹಿ ಹಾಕಿದ್ದರು. ಜೊತೆಗೆ ಇವರು ಸಹ ಮುಖ್ಯಮಂತ್ರಿಯಾಗಿದ್ದರು. ಅಲ್ಲದೇ ಗಾಂಧಿ ಎನ್ನುವವರೊಬ್ಬರಿಗೆ ಇವರೇ ಪ್ರಯತ್ನಿಸಿ ಟೆಂಡರ್ ಕೊಡಿಸಿದರು. ಈ ವಿಚಾರವಾಗಿ ನ್ಯಾಯಾಲಯವು ಛಿಮಾರಿ ಹಾಕಿತ್ತು. ಬೇನಾಮಿ ಹೆಸರಿನಲ್ಲಿ ಅಲ್ಲಲ್ಲಿ ಸಾಕಷ್ಟು ವ್ಯವಹಾರಗಳು ನಡೆದವು. ಅವರಂತೆ ನಾನು ಹೆಸರುಗಳನ್ನು ತೆಗೆದುಕೊಳ್ಳಲು ಹೋಗುವುದಿಲ್ಲ’ ಎಂದು ತಿಳಿಸಿದರು.













