ಮತದಾರರ ಪಟ್ಟಿಯ ಪರಿಷ್ಕರಣೆ ಅಕ್ರಮ ಖಂಡಿಸಿ ಪ್ರತಿಭಟನೆ ನಡೆಸುವ ವೇಳೆ ಸುಪ್ರೀಂ ಕೋರ್ಟ್ ಆವರಣದಲ್ಲೇ ಮೂರು ತಿಂಗಳ ಗರ್ಭಿಣಿ ಪತ್ರಕರ್ತೆಯನ್ನು ಉದ್ದೇಶಪೂರ್ವಕವಾಗಿ ತಳ್ಳಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನಲೆಯಲ್ಲಿ, ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿ, ಕಾಂಗ್ರೆಸ್ ನಾಯಕರಿಂದ ಪ್ರತಿಕ್ರಿಯೆ ಕೋರಿದೆ ಎಂದು ಮೂಲಗಳು ತಿಳಿಸಿವೆ.
ಅಕ್ಟೋಬರ್ 12ರಂದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಸುಪ್ರೀಂ ಕೋರ್ಟ್ಗೆ ಹಮ್ಮಿಕೊಂಡಿದ್ದ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಿರಿಯ ವಕೀಲ ಗೌರವ್ ಭಾಟಿಯಾ ಅವರು ಸಂತ್ರಸ್ತ ಪತ್ರಕರ್ತೆಯ ಪರವಾಗಿ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ವಾದ ಮಂಡಿಸಿದ್ದರು. ಅರ್ಜಿಯ ಪ್ರಕಾರ, ಭದ್ರತಾ ಸಿಬ್ಬಂದಿ ಹಾಗೂ ಮಾಧ್ಯಮದವರು ಇದ್ದ ಪ್ರದೇಶದಲ್ಲಿ ಮಹಿಳಾ ಪತ್ರಕರ್ತೆಯನ್ನು ಗೇಟ್ನತ್ತ ಬಲವಾಗಿ ತಳ್ಳಲಾಗಿತ್ತು. ಈ ವರ್ತನೆಯನ್ನು ನಿಲ್ಲಿಸುವಂತೆ ಪತ್ರಕರ್ತೆ ಸ್ಪಷ್ಟವಾಗಿ ಕೇಳಿಕೊಂಡಿದ್ದರೂ ಉದ್ದೇಶಪೂರ್ವಕವಾಗಿ ತಳ್ಳಲಾಗಿದ್ದು, ಇದರಿಂದ ಅವರು ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದಿದ್ದಾರೆ. ಬೀಳುವಾಗ ಕೈಗಳನ್ನು ನೆಲಕ್ಕೆ ಊರಿಕೊಂಡಿದ್ದರಿಂದ ಅವರಿಗೆ ಗಾಯಗಳಾಗಿವೆ ಎಂದು ದೂರಲಾಗಿದೆ.
ಅಕ್ಟೋಬರ್ 16ರಂದೇ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದ ವಕೀಲ ಗೌರವ್ ಭಾಟಿಯಾ, ಘಟನೆಯ ಬಲಿಪಶು ಆಗಿರುವ ಮಹಿಳಾ ಪತ್ರಕರ್ತೆ 3 ತಿಂಗಳ ಗರ್ಭಿಣಿಯಾಗಿದ್ದು, ತಳ್ಳಿದ ಪರಿಣಾಮ ತೀವ್ರ ಅಸ್ವಸ್ಥಗೊಂಡು ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಬೇಕಾಯಿತು ಎಂದು ತಿಳಿಸಿದ್ದರು. ಇದು ಸಾಮಾನ್ಯ ನೂಕುನುಗ್ಗಲಿನಿಂದ ನಡೆದ ಆಕಸ್ಮಿಕ ಘಟನೆಯಲ್ಲ, ಹೀಗಾಗಿ ನ್ಯಾಯಾಲಯ ಇದನ್ನು ಗಂಭೀರವಾಗಿ ಪರಿಗಣಿಸಿ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶಿಸಬೇಕು ಮತ್ತು ನೊಂದ ಪತ್ರಕರ್ತೆಗೆ ಸೂಕ್ತ ಪರಿಹಾರ ಕೊಡಿಸಬೇಕು ಎಂದು ಅರ್ಜಿದಾರರು ಆಗ್ರಹಿಸಿದ್ದಾರೆ.













